ಹೈದರಾಬಾದ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇಂದು ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 24ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತೆಲಂಗಾಣದ ಜಿಲ್ಲೆಯ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿ 24 ಮಂದಿ ಸಾವನ್ನಪ್ಪಿದ್ದು, 20 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟ್ರಕ್ ಅನ್ನು ಅತಿಯಾದ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿ ತಿಳಿಸಿದೆ. ತಿರುವಿನಲ್ಲಿ ಅತಿ ವೇಗದಲ್ಲಿ ಬಂದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿರುವುದಲ್ಲದೆ, ಅದರಲ್ಲಿಇದ್ದ ಜಲ್ಲಿಕಲ್ಲು ಬಸ್ ಒಳಗಡೆ ಇದ್ದ ಪ್ರಯಾಣಿಕೆ ಮೇಲೆ ಸುರಿದಿದೆ. ಇದು 10ಕ್ಕೂ ಹೆಚ್ಚು ಮಂದಿಯ ಪ್ರಾಣಹಾನಿಗೆ ಕಾರಣವಾಗಿದೆ.
ಭೀಕರ ಅಪಘಾತದಲ್ಲಿ ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ. ಅಲ್ಲದೆ, 20 ಜನರು ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ, 5 ಜನರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಳ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ತೀವ್ರ ದುಃಖ ತಂದಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ
ಇದೇ ವೇಳೆ ಮೃತರ ಕುಟಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:Renukaswamy ಹತ್ಯೆ ಕೇಸ್ : ವಿಚಾರಣೆ ಮುಂದೂಡಿದ ನ್ಯಾಯಾಲಯ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/SDL5CAMpIQ0?si=MjdrEqd9L9xZirpC











