ಬೆಂಗಳೂರು: Tulu Times l ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ ಅವರು ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದು, ಮತ್ತೊಬ್ಬ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಶಾಸಕ ಸ್ಥಾನ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ, ಸಚಿವ ಸಂಪುಟದಲ್ಲಿ ಅವಕಾಶ ಸಿಗದಿರುವುದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಾಲ್ಕು ದಶಕಗಳಿಂದ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದೇನೆ. ಸಚಿವ ಸ್ಥಾನದಿಂದ ಕಡೆಗಣಿಸಿರುವುದು ನನಗೆ ನೋವು ತಂದಿದೆ. ಪಕ್ಷ ಬಿಡುವ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಅಥವಾ ಸಚಿವರ ಮಕ್ಕಳಿಗಷ್ಟೇ ಅವಕಾಶ ಸಿಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ಶಾಸಕ ಸ್ಥಾನಕ್ಕೂ, ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದಲ್ಲಿ ಅನೇಕ ಶಾಸಕರಿದ್ದಾರೆ. ಎಲ್ಲರಿಗೂ ಒಂದೇ ವೇಳೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ನಾನು ಕೂಡ ಹಿಂದೆ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ. ನಂತರ ಅವಕಾಶ ದೊರಕಿತ್ತು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದಾರೆ.
ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ 13 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಉಳಿದ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಅವರಲ್ಲಿ ಒಂಬತ್ತು ಮಂದಿ ಹೊಸ ಮುಖಗಳಾಗಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದ ಹಲವರಿಗೆ ಮತ್ತೆ ಅವಕಾಶ ದೊರೆತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಪುಟ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಬದಲಾವಣೆಗಳೂ ನಡೆದಿವೆ. ಆರಂಭದಲ್ಲಿ ಮಾಜಿ ಸಚಿವ ಮಂಕಾಳ ವೈದ್ಯ ಅವರ ಹೆಸರು ಪ್ರಕಟವಾಗಿದ್ದರೂ, ನಂತರ ತಿದ್ದುಪಡಿ ಪಟ್ಟಿಯಲ್ಲಿ ಅವರನ್ನು ಕೈಬಿಟ್ಟು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಲಾಗಿದೆ. ಪಕ್ಷ ತೊರೆಯುವ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಈ ಬದಲಾವಣೆ ನಡೆದಿದೆ ಎಂಬ ಮಾಹಿತಿ ಪಕ್ಷದ ವಲಯದಿಂದ ಕೇಳಿಬಂದಿದೆ. ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಹಲವಾರು ಶಾಸಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್‌ನಲ್ಲಿ ಅಸಮಾಧಾನ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
Congress Cabinet Expansion: MLAs Denied Berths Wield Resignation Threat – ತುಳುಟೈಮ್ಸ್
ಇದನ್ನೂ ಓದಿ :ಕಾಳಿನ ಬೆಲೆ ಗಗನಕ್ಕೇರಿದರೂ ರೈತನ ಕೈ ಖಾಲಿ; ಹೆಸರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿ ರೈತರು
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/_mb3O1ZHoIc?si=gUaFfC6AXGyQAlcC










