ಮಂಗಳೂರು: Tulu Times l ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆ ಡಾ. ವಹೀದಾ ಸುಲ್ತಾನಾ (70) ಅವರು ಹೃದಯಾಘಾತದಿಂದ ಗುರುವಾರ ನಿಧನರಾದರು. ಅವರ ನಿಧನದಿಂದ ಶಿಕ್ಷಣ ಕ್ಷೇತ್ರ, ಪತ್ರಿಕೋದ್ಯಮ ವಲಯ ಹಾಗೂ ಹಳೆಯ ವಿದ್ಯಾರ್ಥಿಗಳಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.
ಮೈಸೂರು ಮೂಲದವರಾಗಿದ್ದ ಡಾ. ವಹೀದಾ ಸುಲ್ತಾನಾ ಅವರು ಸುಮಾರು ಮೂರು ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕ್ಷೇತ್ರದ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅನೇಕ ಪತ್ರಕರ್ತರು, ಮಾಧ್ಯಮ ವೃತ್ತಿಪರರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಬೋಧನೆಯ ಜೊತೆಗೆ ಸಂಶೋಧನೆ, ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ಅವರು ವಿಶೇಷ ಒತ್ತು ನೀಡುತ್ತಿದ್ದರು. ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹಲವು ಶೈಕ್ಷಣಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ವಿಚಾರ ಸಂಕಿರಣಗಳನ್ನು ಯಶಸ್ವಿಯಾಗಿ ಆಯೋಜಿಸಿ ವಿಭಾಗದ ಬೆಳವಣಿಗೆಗೆ ಶ್ರಮಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ಶಿಸ್ತಿನ ನಡೆ ಮತ್ತು ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ನಿವೃತ್ತಿಯ ಬಳಿಕವೂ ಶಿಕ್ಷಣ ಮತ್ತು ಮಾಧ್ಯಮ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಅವರ ಅಗಲಿಕೆಯಿಂದ ಶಿಕ್ಷಣ ಕ್ಷೇತ್ರವು ಅನುಭವಿ ಶಿಕ್ಷಕಿಯನ್ನು ಕಳೆದುಕೊಂಡಂತಾಗಿದೆ ಎಂದು ಸಹೋದ್ಯೋಗಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯು ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಾ. ವಹೀದಾ ಸುಲ್ತಾನಾ ಅವರ ನಿಧನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ವಿವಿಧ ಶಿಕ್ಷಣ ಸಂಸ್ಥೆಗಳು, ಪತ್ರಕರ್ತರು ಹಾಗೂ ಸಮಾಜದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.
Retired Mangalore University Professor Dr. Waheeda Sultana passes away due to a heart attack – ತುಳುಟೈಮ್ಸ್
ಇದನ್ನೂ ಓದಿ :ಚಿತ್ರರಂಗದಿಂದ ಉದ್ಯಮ ಕ್ಷೇತ್ರದವರೆಗೆ ಆಲಿಯಾ ಭಟ್ ಯಶಸ್ಸಿನ ಹೊಸ ಅಧ್ಯಾಯ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/IKW_z7twgxc











