ಸುಳ್ಯ: Tulu Times l 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ದೇಶಭಕ್ತಿ ಸಾರುವ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಶಾಲಾ ಹಂತದಲ್ಲೇ ವಿವಿಧ ಸ್ಪರ್ಧೆಗಳನ್ನು ನಡೆಸಲು ಮಂಡಳಿ ಮುಂದಾಗಿದೆ.
ಕಾರ್ಯಕ್ರಮದ ಅಂಗವಾಗಿ ದೇಶಭಕ್ತಿಗೀತೆ, ಭಾಷಣ, ಪ್ರಬಂಧ, ಚಿತ್ರಕಲೆ ಹಾಗೂ ದೇಶಭಕ್ತಿ ಗೀತೆಯ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸ್ಪರ್ಧೆಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುತ್ತಿದ್ದು, ಬಹುಮಾನಗಳ ಪ್ರಾಯೋಜಕತ್ವವನ್ನು ಯುವಜನ ಸಂಯುಕ್ತ ಮಂಡಳಿಯೇ ವಹಿಸಲಿದೆ. ಆಯಾ ಶಾಲೆಗಳ ವ್ಯಾಪ್ತಿಯ ಸ್ಥಳೀಯ ಸಂಘ–ಸಂಸ್ಥೆಗಳು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಿವೆ.
ತಾಲೂಕಿನ ಕಂದ್ರಪ್ಪಾಡಿ, ಹಾಲೆಮಜಲು, ಪೆರುವಾಜೆ, ಕೇರ್ಪಳ, ಗಾಂಧಿನಗರ, ಕುಕ್ಕುಜಡ್ಕ, ಜಟ್ಟಿಪಳ್ಳ, ಅಮರಪಡ್ನೂರು, ಕೊಲ್ಲಮೊಗ್ರು, ಮೂಡೂರು–ಮರ್ಕಂಜ, ಶೇಣಿ, ಅಡ್ತಲೆ, ದರ್ಖಾಸ್ತು, ಮಿತ್ತಡ್ಕ–ಮರ್ಕಂಜ, ಪುತ್ಯ–ಮಂಡೆಕೋಲು, ಮಡಪ್ಪಾಡಿ, ಉಬರಡ್ಕ ಹಾಗೂ ದಾಸರಬೈಲು ಸೇರಿದಂತೆ ವಿವಿಧ ಪ್ರದೇಶಗಳ ಶಾಲೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.
ದ.ಕ.ಜಿ.ಪಂ. ಸರ್ಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳು, ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ವಿಭಾಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯದ ಪ್ರೌಢ ವಿಭಾಗ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಕೆಲವು ಕಡೆ ಅಂಗನವಾಡಿ ಕೇಂದ್ರಗಳಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ವಿದ್ಯಾರ್ಥಿಗಳಿಗೆ ದೇಶದ ಸ್ವಾತಂತ್ರ್ಯ ಹೋರಾಟ, ರಾಷ್ಟ್ರದ ಮಹತ್ವ ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸ್ಪರ್ಧೆಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ಕುರಿತು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಹಾಗೂ ಕಾರ್ಯದರ್ಶಿ ಮುರಳಿ ನಳಿಯಾರು ಮಾಹಿತಿ ನೀಡಿದ್ದು, ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
79th Independence Day: Patriotic competitions in 20 schools in Sullia – ತುಳುಟೈಮ್ಸ್
ಇದನ್ನೂ ಓದಿ :10 ಕಿ.ಮೀ ವ್ಯಾಪ್ತಿಯಲ್ಲಿ ಅಪಘಾತವಾದ್ರೆ 10 ನಿಮಿಷದಲ್ಲೇ ಆಂಬ್ಯುಲೆನ್ಸ್
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/OI2pvxDU5y0











