Saalumarada Thimmakka: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ, ಸಾಲು ಮರದ ತಿಮ್ಮಕ್ಕ(114) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಲುಮರದ ತಿಮ್ಮಕ್ಕ ಹಿನ್ನೆಲೆ ಏನು..?
ಜೂ. 30 1911 ರಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ಇವರ ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ, ಯಾವುದೇ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿರುವ ಕುಟುಂಬದಲ್ಲಿ ಇವರು ಜನಿಸಿದ್ದಾರೆ. ತಿಮ್ಮಕ್ಕ ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿದ್ದರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ನಂತರ ಸಾಲು ಸಾಲು ಮರಗಳನ್ನು ನೆಟ್ಟು ಜನಪ್ರೀಯತೆ ಗಳಿಸಿದ್ದಾರೆ.
ತಿಮ್ಮಕ್ಕ ಸಿಕ್ಕ ಗೌರವಗಳು..!
ಪರಿಸರಕ್ಕೆ ತಿಮ್ಮಕ್ಕ ನೀಡಿರುವ ಕೊಡುಗೆಯನ್ನು ಗಮನಿಸಿ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಭಾರತ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಅಮೇರಿಕ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಾಗಳಲ್ಲಿ ಪರಿಸರವಾದಿ ಸಂಘಟನೆಗೆ ತಿಮ್ಮಕ್ಕ ಹೆಸರನ್ನು ಇಡಲಾಗಿದೆ.
ಪರಿಸರ ರಾಯಭಾರಿ ತಿಮ್ಮಕ್ಕ !
1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 1997ರಲ್ಲಿ ವೀರಚಕ್ರ ಪ್ರಶಸ್ತಿ. 2000ದಲ್ಲಿ ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, 2004ರಲ್ಲಿ ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳು ವೃಕ್ಷಮಾತೆಯ ಮುಡಿಗೇರಿವೆ.
ಇದಲ್ಲದೆ ರಾಷ್ಟ್ರೀಯ ನಾಗರಿಕ ಪ್ರಶಸ್ತಿ (1995), ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಗಳು (1997), ವೀರ ಚಕ್ರ ಪ್ರಶಸ್ತಿ (1997), ಮತ್ತು ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ (2000), ಹಂಪಿ ವಿಶ್ವವಿದ್ಯಾನಿಲಯದಿಂದ ನಾಡೋಜ ಪ್ರಶಸ್ತಿ (2010), ಮುಂತಾದವುಗಳನ್ನು ನೀಡಲಾಯಿತು. 2016 ರಲ್ಲಿ, ಬಿಬಿಸಿ ತಿಮ್ಮಕ್ಕ ಅವರನ್ನು ವಿಶ್ವದ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ ಮಹಿಳೆಯರಲ್ಲಿ ಒಬ್ಬರು ಎಂದು ಪಟ್ಟಿ ಮಾಡಿದೆ. ಕರ್ನಾಟಕ ಸರ್ಕಾರವು ತಿಮ್ಮಕ್ಕ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ನೀಡಿ ಪರಿಸರ ರಾಯಭಾರಿಯಾಗಿ ನೇಮಕ ಮಾಡಿತ್ತು.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











