ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಮನರೇಗಾ ಉಳಿಸಲು ರಾಜಭವನ ಚಲೋ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: Tulu Times | “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ” ಎಂದರು.

“ನಾವು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಬೇಕಿತ್ತು. ಆದರೆ ನಾವು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ನಮ್ಮ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಹೋರಾಟ ಪ್ರತಿ ಪಂಚಾಯ್ತಿಯಲ್ಲಿರುವ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಈ ಹೋರಾಟ ತಲುಪಬೇಕು. ರಾಜ್ಯ, ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಲಾಗುವುದು. ನರೇಗಾ ಕಾರ್ಮಿಕರ ಜೊತೆಗೆ ಪಂಚಾಯಿತಿಗಳ ಹಾಲಿ, ಮಾಜಿ ಸದಸ್ಯರುಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಜಿಲ್ಲಾ ಮಂತ್ರಿಗಳು ಹಾಗೂ ಶಾಸಕರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಬೇಕು. ಎಲ್ಲಿ ಶಾಸಕರಿಲ್ಲವೋ ಅಲ್ಲಿ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ” ಎಂದರು‌. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು” ಎಂದರು.

ಇದನ್ನೂ ಓದಿ: ಮುಂಬೈ ಪ್ರದೇಶದಲ್ಲಿರುವ ಕಲ್ಲುಗಣಿಗಳೇ ವಾಯುಮಾಲಿನ್ಯದ ಹೆಚ್ಚಳಕ್ಕೆ ಕಾರಣವಾಗಿದ್ಯಾ ?

ಯಾವ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕೇಳಿದಾಗ, “ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು” ಎಂದರು.

ಜೆಡಿಎಸ್ ಮನರೇಗಾ ಬದಲಾವಣೆ ಬಗ್ಗೆ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, “ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ” ಎಂದರು. ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ” ಎಂದರು.

ಇದನ್ನೂ ಓದಿ: ಚಂದ್ರನಲ್ಲಿಗೆ ಐತಿಹಾಸಿಕ ವಸ್ತುಗಳನ್ನು ಕೊಂಡೊಯ್ಯಲಿದೆ ನಾಸಾ !

2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು, ಆ ವಿಚಾರ ಬೇಡ ಬಿಡಿ” ಎಂದರು. ರಾಜ್ಯದಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ರೀತಿ ಆರೋಪ ಮಾಡುವವರು ಮಾಧ್ಯಮಗಳ ವೇದಿಕೆಯಲ್ಲಿ ನನ್ನ ಜೊತೆ ಚರ್ಚೆಗೆ ಬರಲಿ. ನಾನು ಅಥವಾ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡರಲ್ಲಿ ಯಾರಾದರೂ ಬರುತ್ತೇವೆ. ಅಕ್ರಮವಾಗಿದ್ದರೆ, ಕನಕಪುರ ತಾಲ್ಲೂಕಿಗೆ ಪ್ರಶಸ್ತಿ ಕೊಟ್ಟಿದ್ದು ಯಾಕೆ? ಅಕ್ರಮ ನಡೆದಿದ್ದರೆ ತನಿಖೆ ಮಾಡಲಿ, ಬಡವರ ಹೊಟ್ಟೆಗೆ ನಷ್ಟ ಮಾಡುವುದೇಕೆ? ಪ್ರತಿ ವರ್ಷ ನಾವು 6 ಸಾವಿರ ಕೋಟಿಯಷ್ಟು ಅನುದಾನದ ಕೆಲಸ ಮಾಡಿದ್ದು ಸರಿಯಲ್ಲವೇ? ಅಕ್ರಮ ಮಾಡಿದ್ದರೆ ಅಂತಹವರನ್ನು ಬಂಧಿಸಿ ಒಳಗೆ ಹಾಕಲಿ” ಎಂದರು.

Raj Bhavan Chalo to save MNREGA: DCM D.K. Shivakumar- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 156

You cannot copy content of this page