ಕರ್ನಾಟಕ

ಕರ್ನಾಟಕದಾದ್ಯಂತ ಆಲಿಕಲ್ಲು ಮಳೆ ಅಲರ್ಟ್: ಮುಂದಿನ 2-3 ದಿನ ಗುಡುಗು, ಗಾಳಿ ಸಹಿತ ಮಳೆ ಸಾಧ್ಯತೆ

ಕರ್ನಾಟಕ : Tulu Times l ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆ ಕಾಣಿಸಿಕೊಳ್ಳಲಿದ್ದು, ಆಲಿಕಲ್ಲು ಮಳೆ, ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರಾಜ್ಯದ ಅನೇಕ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳಿಂದ ಉರಿಯುತ್ತಿರುವ ಬಿಸಿಲಿನಿಂದ ಬಳಲುತ್ತಿದ್ದ ರಾಜ್ಯದ ಜನರಿಗೆ ಈಗ ಮಳೆಯ ರೂಪದಲ್ಲಿ ಸ್ವಲ್ಪ ನೆಮ್ಮದಿ ಸಿಗುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಹಿಂದೆ ಹೀಟ್‌ವೇವ್ ಎಚ್ಚರಿಕೆ ನೀಡಲಾಗಿತ್ತು. ಇದೀಗ ಈ ಭಾಗಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇದರಿಂದ ಬಿಸಿ ವಾತಾವರಣಕ್ಕೆ ತಾತ್ಕಾಲಿಕ ವಿರಾಮ ಸಿಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯೊಂದಿಗೆ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

ಈ ಪೈಕಿ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಕೋಲಾರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯೊಂದಿಗೆ 40 ರಿಂದ 50 ಕಿಮೀ ವೇಗದ ಗಾಳಿ ಬೀಸಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಒಣಹವಾಮಾನ ಮುಂದುವರಿಯುವ ಸಾಧ್ಯತೆ ಇದ್ದರೂ, ಒಟ್ಟಾರೆ ರಾಜ್ಯದ ವಾತಾವರಣ ಅಸ್ಥಿರವಾಗಿದ್ದು ಚದುರಿದ ಮಳೆಯ ಚಟುವಟಿಕೆಗಳು ಕಂಡುಬರುವ ಸಾಧ್ಯತೆ.

Hail and rain alert across Karnataka: Thunderstorms, windy rain likely for next 2-3 days – ತುಳುಟೈಮ್ಸ್

ಇದನ್ನೂ ಓದಿ :ಅಂತರಾಷ್ಟ್ರೀಯ ನೃತ್ಯ ದಿನಾಚರಣೆ: ಕಲೆ, ಸಂಸ್ಕೃತಿಯನ್ನು ಉಳಿಸುವ ಸೇತುವೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/EYKaZkoL8Qk?si=yYMcI_h-Nm_iP-Sx

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 164

You cannot copy content of this page