ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ತೆರವಿಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು : Tulu Times l ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಸ್ತೆ ಬದಿಗಳು ಹಾಗೂ ರಸ್ತೆ ವಿಭಜಕಗಳ (ಡಿವೈಡರ್‌ಗಳ) ಮೇಲೆ ಅಳವಡಿಸಲಾಗಿರುವ ಅಪಾಯಕಾರಿ ಮತ್ತು ಅನಧಿಕೃತ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಹಾಗೂ ಬಂಟಿಂಗ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ. ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದ ರಸ್ತೆ ಹಾಗೂ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಬಂಟಿಂಗ್‌ಗಳು ಕಳಚಿ ವಾಹನಗಳು ಅಥವಾ ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇದೆ. ಇದರಿಂದ ಅಪಘಾತಗಳು ಸಂಭವಿಸಿ ಜೀವಹಾನಿಯಾಗುವ ಅಪಾಯವೂ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಡಳಿತಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಅನಧಿಕೃತವಾಗಿ ಅಳವಡಿಸಲಾದ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇದಲ್ಲದೆ, ಅನುಮತಿ ಇಲ್ಲದೆ ಜಾಹೀರಾತುಗಳನ್ನು ಅಳವಡಿಸಿದವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಆದೇಶದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ, ಅಥವಾ ಕ್ರಮ ಕೈಗೊಳ್ಳದ ಕಾರಣ ಯಾವುದೇ ಅಪಘಾತ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಎಚ್ಚರಿಕೆ ನೀಡಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದೂ ತಿಳಿಸಿದ್ದಾರೆ.

District Collector orders removal of unauthorized flexes, banners in Dakshina Kannada – ತುಳು ಟೈಮ್ಸ್

ಇದನ್ನೂ ಓದಿ : ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ, ಉರಿಯುವ ನೋವು ನಿರ್ಲಕ್ಷಿಸಬೇಡಿ: ನರರೋಗ ತಜ್ಞರ ಎಚ್ಚರಿಕೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/6UrejBf6Tw0?si=yVs4ZWr8bnztfwfW

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 183

You cannot copy content of this page