ಬ್ರೇಕಿಂಗ್ ನ್ಯೂಸ್
ಕರ್ನಾಟಕ

ನಟಿ ರುಕ್ಮಿಣಿ ವಸಂತ್ ಅಶ್ಲೀಲ ನಕಲಿ ಎಐ ಇಮೇಜ್ : ಮೂವರು ಬಂಧನ

ಎಐ : Tulu Times l ಡಿಜಿಟಲ್ ಕಿರುಕುಳದ ಹೆಚ್ಚುತ್ತಿರುವ ಪ್ರಕರಣಗಳ ನಡುವೆ, ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಜನಪ್ರಿಯ ಕನ್ನಡ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಅಶ್ಲೀಲ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದಡಿ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರವಿಕುಮಾರ್ (24), ಚಂದ್ರಕಾಂತ್ (33) ಹಾಗೂ ರಂಜಿತ್ (25) ಎಂದು ಗುರುತಿಸಲಾಗಿದೆ.

ರವಿಕುಮಾರ್ ಬಾಗಲಕೋಟೆ ಮೂಲದವರಾಗಿದ್ದು, ಚಂದ್ರಕಾಂತ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ರಂಜಿತ್ ಬೆಂಗಳೂರಿನ ನಿವಾಸಿಯಾಗಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಅತ್ಯಾಧುನಿಕ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ಅಶ್ಲೀಲ ಫೋಟೋ ಮತ್ತು ವಿಡಿಯೋಗಳಿಗೆ ಅಳವಡಿಸಿ, ನಂತರ ಅವುಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ಈ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಸೈಬರ್ ಕಮಾಂಡ್ ಪೊಲೀಸರು ತನಿಖೆ ಆರಂಭಿಸಿ, ಆರೋಪಿಗಳ ಡಿಜಿಟಲ್ ಚಟುವಟಿಕೆಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ ವೇಳೆ ಆರೋಪಿಗಳಿಂದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಡೀಪ್‌ಫೇಕ್ ವಿಷಯಗಳು ಹಾಗೂ ಅಪ್‌ಲೋಡ್‌ಗೆ ಸಂಬಂಧಿಸಿದ ಮಹತ್ವದ ಡಿಜಿಟಲ್ ಸಾಕ್ಷ್ಯಗಳು ಪತ್ತೆಯಾಗಿವೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಕೃತ್ಯದ ಹಿಂದಿನ ಉದ್ದೇಶ ಕೇವಲ ದುರುದ್ದೇಶವೇ, ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸುವ ಪ್ರಯತ್ನವೇ ಅಥವಾ ಹಣಕ್ಕಾಗಿ ಬೆದರಿಕೆ ಹಾಕುವ ಸಂಚು ಇದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಡೀಪ್‌ಫೇಕ್ ತಂತ್ರಜ್ಞಾನ ದುರ್ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ನಕಲಿ ಫೋಟೋ ಅಥವಾ ವಿಡಿಯೋಗಳನ್ನು ಸೃಷ್ಟಿಸುವುದು ಹಾಗೂ ಹಂಚಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಧಿಗಳಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು ಸಾರ್ವಜನಿಕರಿಗೆ ಇಂತಹ ಪರಿಶೀಲಿಸದ, ದುರುದ್ದೇಶಪೂರಿತ ಫೋಟೋ ಅಥವಾ ವಿಡಿಯೋಗಳನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು ಹಾಗೂ ವೈರಲ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

Actress Rukmini Vasant’s obscene fake AI image: Three arrested – ತುಳು ಟೈಮ್ಸ್

ಇದನ್ನೂ ಓದಿ : ಸಾಮಾಜಿಕ ಜಾಲತಾಣ ಪೋಸ್ಟ್ ಬಳಿಕ ಹಣಕ್ಕೆ ಬೇಡಿಕೆ ಆರೋಪ; ಎಫ್‌ಐಆರ್ ದಾಖಲು

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtube.com/shorts/LMCs_YZtBlU?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page