ಮಂಗಳೂರು: Tulu Times l ಆಟೋ ರಿಕ್ಷಾ ಚಾಲಕ-ಮಾಲಕರ ಹಕ್ಕುಗಳು, ಸಾಮಾಜಿಕ ಭದ್ರತೆ ಹಾಗೂ ಜೀವನೋಪಾಯದ ರಕ್ಷಣೆಗಾಗಿ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ ನೇತೃತ್ವದಲ್ಲಿ ಆ.18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದ್ದು, ಮಂಗಳೂರಿನ ಟೌನ್ಹಾಲ್ ಮುಂಭಾಗದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಆಯೋಜಿಸಲಾಗಿದೆ.
ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ. ಹೆಚ್ಚುತ್ತಿರುವ ನಿರ್ವಹಣಾ ವೆಚ್ಚ, ಇಂಧನ ಬೆಲೆ, ವಿಮೆ, ವಾಹನ ಬಿಡಿಭಾಗಗಳ ದರ ಹಾಗೂ ಇತರ ವೆಚ್ಚಗಳಿಂದ ಆಟೋ ಚಾಲಕ-ಮಾಲಕರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ. ಇದರ ನಡುವೆ ಸಾಮಾಜಿಕ ಭದ್ರತೆ ಮತ್ತು ಗೌರವಯುತ ಬದುಕಿನ ಭರವಸೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆಯೋಜಿಸಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಆಟೋ ರಿಕ್ಷಾ ಚಾಲಕ-ಮಾಲಕರು ಭಾಗವಹಿಸುವಂತೆ ಕರೆ ನೀಡಲಾಗಿದೆ. ವಿಶೇಷವಾಗಿ ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಆಟೋ ರಿಕ್ಷಾ ಚಾಲಕರಿಗೆ ಸಾಮಾಜಿಕ ಭದ್ರತೆ, ಜೀವನೋಪಾಯದ ರಕ್ಷಣೆ ಹಾಗೂ ಗೌರವಯುತ ಬದುಕಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ಚಾಲಕರು ಮತ್ತು ಮಾಲಕರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಪರಿಹಾರ ಹಾಗೂ ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.ನಮ್ಮ ಹಕ್ಕು – ನಮ್ಮ ಹೋರಾಟ ಎಂಬ ಘೋಷಣೆಯೊಂದಿಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಒಗ್ಗಟ್ಟನ್ನು ಪ್ರದರ್ಶಿಸುವಂತೆ ಸಂಘಟನೆ ಮನವಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಆಟೋ ರಿಕ್ಷಾ ಚಾಲಕ-ಮಾಲಕರು ತಮ್ಮ ಹಕ್ಕುಗಳು ಮತ್ತು ಬೇಡಿಕೆಗಳಿಗಾಗಿ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಶ್ರಮವೇ ಆರಾಧನೆ ಎಂಬ ಧ್ಯೇಯದೊಂದಿಗೆ ಕಾರ್ಮಿಕರ ಹಿತಾಸಕ್ತಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
Nationwide protest on August 18 for the rights of auto-rickshaw drivers and owners – ತುಳುಟೈಮ್ಸ್
ಇದನ್ನೂ ಓದಿ : ರೇಷನ್ ಕಾರ್ಡ್ ಇದ್ದವರಿಗೆ ಮುಖ್ಯ ಸೂಚನೆ ; ಈ ಕೆಲಸ ಮಾಡುವುದು ಕಡ್ಡಾಯ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/f6_23OBB8ws











