ಮಂಗಳೂರು : Tulu Times l ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು ₹32,611 ಕೋಟಿ ಮೊತ್ತದ ವಿವಿಧ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೀನುಗಾರರು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಹಲವು ಮನವಿಗಳು ಮತ್ತು ಬೇಡಿಕೆಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಈ ಬೇಡಿಕೆಗಳನ್ನು ಆಧರಿಸಿ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿಗಾಗಿ ಸುಮಾರು ₹16,000 ಕೋಟಿ ಮೀಸಲಿಡಲಾಗಿದ್ದು, ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಮತ್ತೊಂದು ₹16,000 ಕೋಟಿ ಮೊತ್ತವನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ವೈಯಕ್ತಿಕ ಯೋಜನೆಗಳು ಹಾಗೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಯೋಜನೆಗಳ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೆಚ್ಚಿನ ವಿವರ ನೀಡಲಿದ್ದಾರೆ ಎಂದು ತಿಳಿಸಿದರು.
ಸಭೆಯ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು. ಈ ನಿರ್ಧಾರವು ತುಳುನಾಡಿನ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಗೆ ಮಹತ್ವದ ಬೆಳವಣಿಗೆಯಾಗಿದೆ.ಹಣಕಾಸು ಹಾಗೂ ಕಾನೂನು ಸಾಧ್ಯತೆಗಳನ್ನು ಪರಿಶೀಲಿಸಿ ಉಳಿದ ಬೇಡಿಕೆಗಳು ಮತ್ತು ಪ್ರಸ್ತಾವನೆಗಳನ್ನು ಮುಂದಿನ ಸಚಿವ ಸಂಪುಟ ಸಭೆಗಳಲ್ಲಿ ಪರಿಗಣಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೆಂಗಳೂರಿನ ಹೊರಗೆ ನಡೆದ ಮೊದಲ ಸಚಿವ ಸಂಪುಟ ಸಭೆ ಇದಾಗಿದೆ. ಕರಾವಳಿ ಭಾಗದ ಸಮತೋಲಿತ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಜೀವನೋಪಾಯ, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಪ್ರಗತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ರಾಜಕೀಯ ಭೇದಭಾವವಿಲ್ಲದೆ ಎಲ್ಲ ಜನಪ್ರತಿನಿಧಿಗಳ ಸಲಹೆಗಳನ್ನು ಪರಿಗಣಿಸಿ ‘ಟೀಮ್ ಕರ್ನಾಟಕ’ದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದರು.
Cabinet meeting held in Mangaluru: Official status for Tulu – ತುಳುಟೈಮ್ಸ್
ಇದನ್ನೂ ಓದಿ :ಬಿಪಿಎಲ್ ಕಾರ್ಡ್ : ಬಯೋಮೆಟ್ರಿಕ್ ಬೆರಳಚ್ಚು ನಿಯಮ ಸರಳೀಕರಣ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :











