ಬೆಂಗಳೂರು: Tulu Times | ಕಾರು ಅಪಘಾತದಲ್ಲಿ ಮೃತಪಟ್ಟ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಜಕೀಯ ಗಣ್ಯರ ಸಂತಾಪ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ, ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿ, ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜನಪರ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿ, ಮಹಾಂತೇಶ ಬೀಳಗಿ ನಿಧನ ಹೊಂದಿರುವ ಸುದ್ದಿ ಕೇಳಿ ಆಘಾತವಾಗಿದೆ. ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರು, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ಎಂಡಿಯಾಗಿ ತಮ್ಮ ಛಾಪು ಮೂಡಿಸಿದ್ದರು. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ, ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಅವರ ಅಕಾಲಿಕ ನಿಧನದಿಂದ ರಾಜ್ಯ ಒಬ್ಬ ಹಿರಿಯ, ದಕ್ಷ, ಮತ್ತು ಉತ್ತಮ ಅಧಿಕಾರಿಯನ್ನು ಕಳೆದುಕೊಂಡಿದೆ. ಅಗಲಿದ ಹಿರಿಯ ಅಧಿಕಾರಿಯ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನನ್ನ ತೀವ್ರ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
political-dignitaries-and-siddaramaiah-condolence-on-mahantesh-bilagis-death- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











