ಬೆಂಗಳೂರು: Tulu Times l ಕರ್ನಾಟಕ ಸರ್ಕಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಆರ್ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಖಾತೆ ಹಂಚಿಕೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗುರುವಾರ ರಾತ್ರಿ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದರು. ಈ ಹಂಚಿಕೆಯಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ಮಹಾ ಮತ್ತು ಮಧ್ಯಮ ನೀರಾವರಿ ಇಲಾಖೆ ನೀಡಲಾಗಿತ್ತು. ಆದರೆ ಅವರು ಬೆಂಗಳೂರು ಅಭಿವೃದ್ಧಿ ಇಲಾಖೆಯನ್ನು ನಿರೀಕ್ಷಿಸಿದ್ದರು ಎನ್ನಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ, ಈ ಅವಮಾನವನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು? ನನ್ನ ಮುಂದೆ ಬೇರೆ ಯಾವ ಆಯ್ಕೆಯೂ ಇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜೂನ್ 3ರಂದು ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಇದು ಮೊದಲ ದೊಡ್ಡ ರಾಜಕೀಯ ಹಿನ್ನಡೆಯಾಗಿ ಕಾಣಲಾಗುತ್ತಿದೆ. ಖಾತೆ ಹಂಚಿಕೆ ಕುರಿತಾಗಿ ಕೆಲವು ಸಚಿವರಲ್ಲಿ ಅಸಮಾಧಾನವಿದೆ ಎಂಬ ವರದಿಗಳು ಈಗಾಗಲೇ ಹೊರಬಿದ್ದಿದ್ದವು. ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ನಾಯಕತ್ವವು ಅವರನ್ನು ಮನವೊಲಿಸಲು ಕೊನೆಯ ಕ್ಷಣದ ಪ್ರಯತ್ನ ನಡೆಸಿದೆಯಾದರೂ, ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ ಎಂದು ವರದಿಯಾಗಿದೆ.
ಪಕ್ಷದ ನಾಯಕರ ಸಲಹೆಗಳನ್ನು ಕೇಳುವ ಸಮಯ ಮೀರಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಹೇಗೆ ನಿರ್ವಹಿಸಲಿದ್ದಾರೆ ಎಂಬುದು ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
Dissatisfaction with portfolio allocation: Ramalinga Reddy resigns from ministerial post – ತುಳು ಟೈಮ್ಸ್
ಇದನ್ನೂ ಓದಿ : ಜೀವನವು ಸೈಕಲ್ ಸವಾರಿ ಮಾಡಿದಂತೆಯೇ : ಆಲ್ಬರ್ಟ್ ಐನ್‌ಸ್ಟೈನ್
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/xI868u7lWtY?si=TnTSgodIblwcMQKB










