ಬೆಂಗಳೂರು: Tulu Times l ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಅಸಹಜ ಸಾವುಗಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಲಾಗುತ್ತಿರುವ ಬಗ್ಗೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಬಗ್ಗೆ ಶೀಘ್ರದಲ್ಲೇ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.
ಶುಕ್ರವಾರ (ಜೂನ್ 12) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಕಾಶ್ ರಾಜ್, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಈ ವಿಷಯವು ಸೂಕ್ಷ್ಮವಾಗಿರುವುದರಿಂದ ಪ್ರತಿಕ್ರಿಯಿಸುವ ಜವಾಬ್ದಾರಿ ತಮ್ಮದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ತಾವು ಊರಿನ ಹೊರಗಿರುವುದಾಗಿ ಹೇಳಿರುವ ಅವರು, ಇನ್ನೆರಡು ದಿನಗಳಲ್ಲಿ ಖುದ್ದಾಗಿ ಮಾಧ್ಯಮಗಳ ಮುಂದೆ ಬಂದು ಈ ಕುರಿತು ಮಾತನಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರಿಶೀಲಿಸದ ಹಾಗೂ ದೃಢೀಕರಿಸದ ಮಾಹಿತಿಗಳನ್ನು ನಂಬಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇದಕ್ಕೆ ನಡುವೆಯೇ, ಹೈಕೋರ್ಟ್‌ಗೆ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ ಪ್ರಮುಖ ಆರೋಪಿಯಾಗಿರುವ ‘ಮಾಸ್ಕ್ ಮ್ಯಾನ್’ ಸಿಎನ್ ಚಿನ್ನ (ಚೆನ್ನಯ್ಯ) ಎಂಬಾತ ನೀಡಿರುವ ಹೇಳಿಕೆಗಳಲ್ಲಿ ಪ್ರಕಾಶ್ ರಾಜ್ ಅವರ ಹೆಸರೂ ಉಲ್ಲೇಖವಾಗಿದೆ ಎನ್ನಲಾಗಿದೆ. ಆರೋಪಿಯು ಸಲ್ಲಿಸಿರುವ ಅರ್ಜಿಯಲ್ಲಿ ಕೆಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ಆರೋಪಗಳ ಸತ್ಯಾಸತ್ಯತೆ ಕುರಿತು ಯಾವುದೇ ಅಧಿಕೃತ ದೃಢೀಕರಣ ಇನ್ನೂ ಹೊರಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳ ಅಧಿಕೃತ ಮಾಹಿತಿ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಈ ನಡುವೆ, ತಮ್ಮ ವಿರುದ್ಧ ಹರಿದಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸಂಪೂರ್ಣ ವಿವರ ನೀಡುವುದಾಗಿ ಪ್ರಕಾಶ್ ರಾಜ್ ಸ್ಪಷ್ಟಪಡಿಸಿದ್ದು, ಅವರ ಪ್ರತಿಕ್ರಿಯೆ ಬಗ್ಗೆ ಸಾರ್ವಜನಿಕರು ಮತ್ತು ಮಾಧ್ಯಮಗಳಲ್ಲಿ ಕುತೂಹಲ ಹೆಚ್ಚಾಗಿದೆ.
Actor Prakash Raj responds to allegations related to Dharmasthala case – ತುಳುಟೈಮ್ಸ್
ಇದನ್ನೂ ಓದಿ :‘ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ’ ಯೋಜನೆಯಿಂದ ಕರಾವಳಿಯ 12,886 ಹೃದಯ ರೋಗಿಗಳಿಗೆ ಜೀವದಾನ
==
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/4pEuD7fDOuo?si=IH9HvdGPNHYPQQOf











